Bangalore NEWS :
ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್ನಲ್ಲಿ 100 ಕೋಟಿ ರೂ. ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದರು.
ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಬಾರಿಯ ಬಜೆಟ್ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು.
ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿದರು. ರಸ್ತೆ, ಉದ್ಯಾನ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನಕ್ಕೆ ಮನವಿ ಮಾಡಿದರು. ಒಟ್ಟಾರೆ, ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್ನಲ್ಲಿ 100 ಕೋಟಿ ರೂ. ಅನುದಾನಕ್ಕೆ ಒತ್ತಾಯಿಸಿದರು.
ಮೆಟ್ರೋ ದರ ಮತ್ತಷ್ಟು ಇಳಿಸುವ ಕೋರಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ”ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ, ಮೆಟ್ರೋಗೆ ಪತ್ರ ಬರೆಯಲಾಗಿದೆ. ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ” ಎಂದು ತಿಳಿಸಿದರು.
ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ನಿಯೋಗದಲ್ಲಿ ಬಿಜೆಪಿ ಪಕ್ಷದ ಶಾಸಕರು, ಸಂಸದರು ಇದ್ದರು.
ಇದನ್ನೂ ಓದಿ : Bamboo Socks: Delhi-Based Company To Set Up Manufacturing Unit In Assam