ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯು ಹೆಚ್ಚುವರಿಯಾಗಿ 2 ಸಾವಿರ ಬಸ್‌ಗಳನ್ನು ಬುಧವಾರ (ಅಕ್ಟೋಬರ್ 29) ಈ ಬಸ್‌ಗಳ ಸಂಚಾರ ಆರಂಭವಾಗುತ್ತಿದ್ದು, ಬೆಂಗಳೂರಿನಿಂದ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ನಗರಗಳಿಗೆ ಸಂಚಾರ ನಡೆಸಲಿವೆ.
ಅಕ್ಟೋಬರ್ 30 ರಿಂದ ನವೆಂಬರ್ 1 ರವರೆಗೆ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ನಾನಾ ಪ್ರದೇಶಗಳಿಗೆ ಹೆಚ್ಚುವರಿಯಾಗಿ 2 ಸಾವಿರ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಹಾಗೂ ಇತರೆ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆಗೊಳ್ಳಲಿವೆ.
ಮೈಸೂರು ರಸ್ತೆಯ ಸ್ಯಾಟ್‌ಲೈಟ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿಗೆ ಸಂಚರಿಸಲಿವೆ.
ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಸೇರಿದಂತೆ ಮುಂತಾದ ಸ್ಥಳಗಳಿಗೆ ಶಾಂತಿನಗರದಲ್ಲಿನ ಬಿಎಂಟಿಸಿ ಬಸ್ ನಿಲ್ದಾಣದಿಂದ ಐಷಾರಾಮಿ ಬಸ್‌ಗಳು ತೆರಳಲಿವೆ.
ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಕರಸಾ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 300 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.
ಅ.31ರಂದು ಗುರುವಾರ ನರಕ ಚತುರ್ದಶಿ, ನ.1ರಂದು ಶುಕ್ರವಾರ ಕನ್ನಡ ರಾಜ್ಯೋತ್ಸವ, ನ.2ರಂದು ಶನಿವಾರ ಬಲಿಪಾಢ್ಯಮಿ ಹಾಗೂ ನ.3ರಂದು ರವಿವಾರ ಇರುವುದರಿಂದ ಬೆಂಗಳೂರು ಮತ್ತು ಇತರೆ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು.