ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳದ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಮೂರು ದಿನಗಳ ಕಾಲ ನಡೆಯುವ ದತ್ತ ಜಯಂತಿಗೆ ಇಂದು ಚಿಕ್ಕಮಗಳೂರಿನಲ್ಲಿ ಚಾಲನೆ ದೊರೆಯಿತು. ಅನುಸೂಯ ಜಯಂತಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಪಾಲಿಟೆಕ್ನಿಕ್ ಕಾಲೇಜು ಸಮೀಪ ಮುಕ್ತಾಯಗೊಂಡಿತು.
ಮೆರವಣಿಗೆಗೆ ಮೊದಲು ದೇವಾಲಯದ ಆವರಣದಲ್ಲಿ ಬಹಿರಂಗ ಸಭೆ ನಡೆಯಿತು. ಮೆರವಣಿಗೆಯ ಮುಂಚೂಣಿಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮುಖಂಡರು ಭಾಗವಹಿಸಿದ್ದರು.
ದತ್ತಾತ್ರೇಯ ವಿಗ್ರಹದೊಂದಿಗೆ ಹೊರಟ ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಭಾಗವಹಿಸಿದ್ದರು. ದತ್ತ ಭಜನೆ, ಅನುಸೂಯ ಭಜನೆಯೊಂದಿಗೆ ಮೆರವಣಿಗೆ ಸಾಗಿತು. ಮಹಿಳೆಯರು ಮೆರವಣಿಗೆಯ ಬಳಿಕ ದತ್ತಪೀಠಕ್ಕೆ ತೆರಳಿ ದತ್ತ ಪಾದುಕೆಗಳಿಗೆ ಪೂಜೆ ಸಲ್ಲಿಸಿ, ಹೋಮ ಹವನಗಳಲ್ಲಿ ಪಾಲ್ಗೊಂಡರು.
ಚಿಕ್ಕಮಗಳೂರು ನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಾಳೆ ಮಧ್ಯಾಹ್ನದ ಬಳಿಕ ಶೋಭಾಯಾತ್ರೆ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ ಕೆಲ ಕಾರ್ಯಕರ್ತರು ಭಿಕ್ಷಾಟನೆ ನಡೆಸಲಿದ್ದಾರೆ.
ಶೋಭಾಯಾತ್ರೆ ಅಂಗವಾಗಿ ನಾಳೆ ಬೆಳಗ್ಗೆಯಿಂದಲೇ ಮಹಾತ್ಮ ಗಾಂಧಿ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ನಿಲುಗಡೆ ಸಂಪೂರ್ಣ ನಿಷೇಧಿಸಲಾಗಿದ್ದು, ಮುಖ್ಯರಸ್ತೆ ಸಂಪರ್ಕಿಸುವ ಅಡ್ಡ ರಸ್ತೆಗಳಲ್ಲಿಯೂ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ನಾಳೆ ಮತ್ತು ನಾಡಿದ್ದು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ದತ್ತ ಜಯಂತಿ ಅಂಗವಾಗಿ, ಪ್ರಮುಖ ವೃತ್ತಗಳನ್ನು ಕೇಸರಿ ಬಂಟಿಂಗ್ಸ್ಗಳಿಂದ ಸಿಂಗರಿಸಲಾಗಿದೆ. ಅನೇಕ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಸರ್ಪಗಾಗಲು ನಿಯೋಜನೆ ಮಾಡಲಾಗಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now