ವಿಜಯಪುರ: ಮಂಗಳವಾರ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡು ಜನರಿಗೆ ತೊಂದರೆ ನೀಡಿದರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ.
ಪಂಚಮಸಾಲಿ ಸಮುದಾಯದವರು 2ಎ ಪ್ರವರ್ಗದಡಿ ಮೀಸಲಾತಿಗೆ ಆಗ್ರಹಿಸಿ ಧರಣಿ ನಡೆಸುವುದರಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಆದರೆ ಪ್ರತಿಭಟನೆ ಶಾಂತಿಯುತವಾಗಿರಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಮಂಗಳವಾರ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಹಲವರು ಗಾಯಗೊಂಡಿದ್ದರು.
ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದ ಸಿಎಂ, ಯಾರಾದರೂ ಕಾನೂನನ್ನು ಕೈಗೆ ತೆಗೆದುಕೊಂಡು ಜನರಿಗೆ ತೊಂದರೆ ಕೊಟ್ಟರೆ ಸರ್ಕಾರ ಕಣ್ಣು ಮುಚ್ಚಿ ಕೂರುವುದಿಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಪಂಚಮಸಾಲಿ ಸಮುದಾಯವು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ. 15 ರಷ್ಟು ಮೀಸಲಾತಿಯನ್ನು ಹೊಂದಿರುವ 2Aಗೆ ಸೇರಿಸಬೇಕು ಎಂದು ಒತ್ತಾಯಿಸುತ್ತಿದೆ.