ತ್ರಿವಿಧ ದಾಸೋಹಿ ಹಾಗೂ ನಡೆದಾಡುವ ದೇವರೆಂದೇ ಹೆಸರು ಪಡೆದಿರುವ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಅವಮಾನ ಮಾಡಲಾಗಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಈ ವಿಚಾರದ ಬಗ್ಗೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಗೆ ಹಾನಿಯಾಗಿರುವ ಫೋಟೋವನ್ನೂ ಅವರು ಪೋಸ್ಟ್‌ನಲ್ಲಿ ಶೇರ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಬೆಂಗಳೂರಿನ ಯಾವ ಪ್ರದೇಶದಲ್ಲಿರುವ ಪುತ್ಥಳಿಗೆ ಈ ರೀತಿಯಾಗಿದೆ ಎಂದು ನಿಖರವಾಗಿ ತಿಳಿದುಬಂದಿಲ್ಲ.
ಜಾತಿ, ಧರ್ಮದ ಭೇದವಿಲ್ಲದೇ ಲಕ್ಷಾಂತರ ಬಡಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿದ ನಡೆದಾಡುವ ದೇವರ ಮೇಲೂ ಮತಾಂಧರ ಕೆಂಗಣ್ಣು ಬಿದ್ದಿದೆ. ಇಂತಹ ಪುಂಡರ ಹೆಡೆಮುರಿ ಕಟ್ಟಬೇಕಿದ್ದ ಸರ್ಕಾರವೇ, ಸಾಧು-ಸಂತರ ಮೇಲೆ ಎಫ್‌ಐಆರ್ ದಾಖಲಿಸುವ ಮೂಲಕ ಈ ಭಯೋತ್ಪಾದಕರಿಗೆ ನೈತಿಕ ಬೆಂಬಲ ನೀಡುತ್ತಿದೆ ಎಂದು ಅರವಿಂದ್ ಬೆಲ್ಲದ್ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುತ್ಥಳಿಗೆ ಅಪಮಾನ ಮಾಡಿದ ಸಮಾಜ ಘಾತುಕರನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತೇನೆ ಎಂದು ಬೆಲ್ಲದ್ ಒತ್ತಾಯಿಸಿದ್ದಾರೆ. ಕರ್ನಾಟಕ ಸರ್ಕಾರದ ಓಲೈಕೆ, ತುಷ್ಟೀಕರಣ, ವೋಟ್ ಬ್ಯಾಂಕ್ ರಾಜಕಾರಣವೇ ಇಂತಹ ಘಟನೆಗಳು ರಾಜ್ಯದಲ್ಲಿ ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ ಎಂದೂ ಅವರು ಆರೋಪ ಮಾಡಿದ್ದಾರೆ.
1907ರಲ್ಲಿ ಜನಿಸಿದ ಡಾ.ಶಿವಕುಮಾರ ಸ್ವಾಮೀಜಿ ಅವರು ವಿರಕ್ತಾಶ್ರಮ ದೀಕ್ಷೆ ಪಡೆದು 1930ರಲ್ಲಿ ಪ್ರಸಿದ್ಧ ಸಿದ್ಧಗಂಗಾ ಕ್ಷೇತ್ರವನ್ನು ಪ್ರವೇಶಿಸಿದರು. ಜಂಗಮ ಮೂರ್ತಿಗಳಾದ ಶಿವಕುಮಾರ ಮಹಾಸ್ವಾಮಿಗಳು ಉದ್ಧಾನ ಶಿವಯೋಗಿಗಳ ಇಚ್ಛೆಯಂತೆ 1941ರಲ್ಲಿ ಸಿದ್ಧಗಂಗಾ ಮಠದ ಉತ್ತರಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದರು. ನಂತರ ಸಿದ್ಧಗಂಗಾ ಕ್ಷೇತ್ರ ಎಲ್ಲೆಡೆ ಮನೆಮಾತಾಯಿತು.
ಶಿವಕುಮಾರ ಸ್ವಾಮೀಜಿ ಅವರು ತಮ್ಮ ವೈಯಕ್ತಿಕ ಜೀವನವನ್ನು ತ್ಯಾಗ ಮಾಡಿ, ಸುಮಾರು 80 ವರ್ಷಗಳ ಕಾಲ ನಿರಂತರವಾಗಿ ಅವಕಾಶವಂಚಿತ ಮಕ್ಕಳಿಗೆ ಜಾತಿ, ಮತ, ಅಂತಸ್ತುಗಳನ್ನೆಣಿಸದೇ ಅನ್ನ ದಾಸೋಹದ ಜೊತೆಗೆ ಅಕ್ಷರವನ್ನು ಕಲಿಸಿ ಬದುಕಿಗೆ ಬೆಳಕಾದವರು. ಅವರು ತುಮಕೂರು, ಮೈಸೂರು, ಬೆಂಗಳೂರು, ಚಾಮರಾಜನಗರ, ಮಾಗಡಿ ತಾಲ್ಲೂಕು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದಿಗೂ ಅವರ ಕಾರ್ಯಗಳು ಮನ್ನಣೆ ಗಳಿಸಿವೆ.
ನಡೆದಾಡುವ ದೇವರು, ಕಾಯಕ ಯೋಗಿ, ತ್ರಿವಿಧ ದಾಸೋಹಿ ಎಂದೇ ಪ್ರಸಿದ್ಧಿ ಪಡೆದಿರುವ ಶಿವಕುಮಾರ ಸ್ವಾಮೀಜಿಗಳು 2019ರ ಜನವರಿ 21ರಂದು ಕೈಲಾಸವಾಸಿಯಾದರು.
ಇವರ ಸ್ಮರಣಾರ್ಥ ಹಲವು ರಸ್ತೆಗಳಿಗೆ ಶ್ರೀಗಳ ಹೆಸರು ನಾಮಕರಣ ಮಾಡಲಾಗಿದೆ. ಸರ್ಕಲ್‌ಗಳಲ್ಲಿ ಇವರ ಪುತ್ಥಳಿಗಳನ್ನು ಕೂಡ ಸ್ಥಾಪಿಸಲಾಗಿದೆ. ಸದ್ಯ ಬೆಂಗಳೂರಿನಲ್ಲಿರುವ ಶ್ರೀಗಳ ಪುತ್ಥಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.