ಬೆಂಗಳೂರು: ದೀಪಾವಳಿಗೆ ದೀಪಗಳ ಜೊತೆಗೆ ಪಟಾಕಿ ಸಿಡಿಸುವುದು ಹಬ್ಬದ ಸಂಭ್ರಮದ ನಡುವೆ ಪರಿಸರ ಮಾಲಿನ್ಯ ಹೆಚ್ಚಾಗುವುದನ್ನು ತಡೆಯಲು ಸುಪ್ರೀಂ ಕೋರ್ಟ್ ಆದೇಶ ನೀಡಲಾಗಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ, ದೀಪಾವಳಿಯ ಮೂರು ದಿನ ರಾತ್ರಿ ಎರಡು ಗಂಟೆಗಳ ಕಾಲ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ.
ಪಟಾಕಿಗಳನ್ನು ಸಿಡಿಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಲವಾರು ನಿರ್ದೇಶನಗಳನ್ನು ನೀಡಿರುತ್ತದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದನ್ವಯ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದೀಪಾವಳಿಯ ಸಮಯದಲ್ಲಿ ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ.
ದೀಪಾವಳಿ ಹಬ್ಬದ ಮೂರು ದಿನಗಳಲ್ಲಿ ಈ ನಿರ್ದೇಶನ ಅನ್ವಯಿಸಲಿದೆ. ಅಕ್ಟೋಬರ್ 31ರಿಂದ ನವೆಂಬರ್ 02ರವರೆಗೆ ಮೂರು ದಿನಗಳ ಕಾಲ ಪಟಾಕಿ ಸ್ಫೋಟಿಸಲು ಅವಕಾಶ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಇನ್ನು ದೀಪಾವಳಿಗೂ ಮುನ್ನ ನಿಷೇಧಿತ ರಾಸಾಯನಿಕಗಳನ್ನು ಬಳಸಿರುವ ಪಟಾಕಿ ಸಿಡಿಸದಂತೆ 2021ರಲ್ಲಿ ಸುಪ್ರೀಂ ಕೋರ್ಟ್ ಹಲವು ನಿರ್ದೇಶನಗಳನ್ನು ನೀಡಿತ್ತು. ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧವಿಲ್ಲ ಮತ್ತು ಬೇರಿಯಂ ಲವಣಗಳನ್ನು ಹೊಂದಿರುವ ಪಟಾಕಿಗಳನ್ನು ಮಾತ್ರ ನಿಷೇಧಿಸಲಾಗಿದೆ ಎಂದು ಪೀಠ ಸ್ಪಷ್ಟಪಡಿಸಿದೆ. 2018 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಅನುಸರಿಸಿ ಹಸಿರು ಪಟಾಕಿಗಳನ್ನು ಅನುಮತಿಸಲಾಗಿದೆ. 2018ರಲ್ಲಿ ನ್ಯಾಯಾಲಯವು ಪಟಾಕಿ ಸಿಡಿಸಲು ಸಮಯವನ್ನು ನಿಗದಿಪಡಿಸಿತ್ತು.
ದೀಪಾವಳಿ ಸಂದರ್ಭದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮತ್ತು ಹೊಸ ವರ್ಷ ಹಾಗೂ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ರಾತ್ರಿ 11.55ರಿಂದ, 12.30ರವರೆಗಿನ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿತ್ತು.