ಬೆಳಗಾವಿ:ಗ್ರಾಮ ಪಂಚಾಯತ್ ಸದಸ್ಯರಿಗೆ ಒತ್ತಡ ಹೇರದಂತೆ ತಿಳಿಸಲಾಗಿದೆ. ಅವರ ಬೇಡಿಕೆಗಳನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು.
ಗ್ರಾಮ ಪಂಚಾಯತ್ ಸದಸ್ಯರ ಗೌರವ ಧನ ಹೆಚ್ಚಳ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಹೇಳಿದರು.
ಗ್ರಾಮ ಪಂಚಾಯತ್ ಸದಸ್ಯರಿಗೆ ಒತ್ತಡ ಹೇರದಂತೆ ತಿಳಿಸಲಾಗಿದೆ.
ಅವರ ಬೇಡಿಕೆಗಳನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಳಿಸಿದರು.
ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯರಾದ ಧನಂಜಯ ಸಿರ್ಜಿ ಮತ್ತು ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಬೇಡಿಕೆಗಳನ್ನು ಸರ್ಕಾರ ಆಲಿಸಿದ್ದು, ಅವರ ಮನವಿಗಳನ್ನು ಹಣಕಾಸು ಇಲಾಖೆಗೆ ರವಾನಿಸಲಾಗಿದೆ. ಶೀಘ್ರದಲ್ಲೇ ಈ ನಿಟ್ಟಿನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿ ವಿವಾದ ಕೋರ್ಟ್‌ನಲ್ಲಿದೆ. ತೀರ್ಪು ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಗ್ರಾಮ ಪಂಚಾಯಿತಿಗಳಿಗೆ ಇಲಾಖಾ ಯೋಜನೆಗಳ ಅನುಷ್ಠಾನ ಜವಾಬ್ದಾರಿ ನೀಡುವ ಪ್ರಕ್ರಿಯೆಗೆ ವೇಗ ನೀಡಲಾಗಿದೆ ಎಂದರು.
ಇದೇ ವೇಳೆ ಕೇರಳ ಮಾದರಿಯಲ್ಲಿ ಹಣ ಪಾವತಿ ಮಾಡಬೇಕೆಂಬ ಬೇಡಿಕೆಯ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರಿಗೆ ಕೇರಳ ಮಾದರಿಯಲ್ಲಿ ಮಾಸಿಕ ಗೌರವಧನ ನೀಡಲು ಸಾಧ್ಯವಿಲ್ಲ.
ಅಲ್ಲಿ 1000 ಪಂಚಾಯಿತಿಗಳು ಇದ್ದರೆ ರಾಜ್ಯದಲ್ಲಿ 5,500 ಇವೆ. 95 ಸಾವಿರಕ್ಕೂ ಹೆಚ್ಚು ಚುನಾಯಿತ ಪ್ರತಿನಿಧಿಗಳು ಇದ್ದಾರೆ. ಹಾಗಾಗಿ, ಎರಡೂ ರಾಜ್ಯಗಳ ಹೋಲಿಕೆ ಸಾಧ್ಯವಿಲ್ಲ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ನಿರ್ಧರಣೆಗೆ ಒಳಪಟ್ಟ ಎಲ್ಲ ಭೂಮಿ ಮತ್ತು ಕಟ್ಟಡಗಳ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆಯಲ್ಲಿ ಪತ್ತೆ ಮಾಡಿದ 1.41 ಕೋಟಿ ಆಸ್ತಿಯನ್ನು ಪಂಚತಂತ್ರದಲ್ಲಿ ಅಳವಡಿಸಲಾಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.