ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರೋ ಫೆಂಗಲ್ ಅನ್ನೋ ಚಂಡಮಾರುತ ತಮಿಳುನಾಡು ಮೂಲಕ ಕರ್ನಾಟಕದತ್ತ ಧಾವಿಸಿದೆ. ಇದರ ಪರಿಣಾಮ ಇಂದಿನಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಜೋರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕಕ್ಕೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದೆ. ಹಾಗಾಗಿ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಲ್ಲೂ ಚಂಡಮಾರುತ ಪರಿಣಾಮ ಬೆಂಗಳೂರಿನ ಮೇಲೂ ಹೆಚ್ಚು ಗೋಚರಿಸಲಿದ್ದು, ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.
ಒಂದೆಡೆ ಮಳೆ ಸುರಿದರೆ ಇನ್ನೊಂದೆಡೆ ಬೆಂಗಳೂರು ಕೊರೆಯುವ ಚಳಿಗೆ ತತ್ತರಿಸಿ ಹೋಗಿದ್ದಾರೆ. ಬೆಂಗಳೂರು ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಧಾರವಾಡ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.