ರಾಂಚಿ: 49 ವರ್ಷದ ಜೆಎಂಎಂ ನಾಯಕ ಹೇಮಂತ್ ಸೊರೆನ್ ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಅವರು ಇಂದು ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಪ್ರಮುಖ ರಾಜಕೀಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಇಂದು ಸಂಜೆ 4 ಗಂಟೆಗೆ ಸೊರೆನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. 49 ವರ್ಷದ ಜೆಎಂಎಂ ನಾಯಕ ಹೇಮಂತ್ ಸೊರೆನ್ ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಿದ್ದಾರೆ.
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಸೊರೆನ್ 39,791 ಮತಗಳ ಅಂತರದಿಂದ ಬಿಜೆಪಿಯ ಗಮ್ಲಿಯೆಲ್ ಹೆಂಬ್ರೋಮ್ ಅವರನ್ನು ಸೋಲಿಸುವ ಮೂಲಕ ಬರ್ಹೈತ್ ಸ್ಥಾನವನ್ನು ಉಳಿಸಿಕೊಂಡರು. 81 ಸದಸ್ಯ ಜಾರ್ಖಂಡ್ ವಿಧಾನಸಭೆಯಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟ 56 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ ನೇತೃತ್ವದ ಎನ್‌ಡಿಎ 24 ಸ್ಥಾನಗಳನ್ನು ಗಳಿಸಿತು.
ಇಂದು ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ರಾಂಚಿ ನಗರದಲ್ಲಿ ಸಂಚಾರ ನಿಯಮಗಳನ್ನು ಜಾರಿಗೆ ತರಲಾಗಿದೆ, ಭದ್ರತೆ ಹೆಚ್ಚಿಸಲಾಗಿದೆ. ಹೇಮಂತ್ ಸೊರೆನ್ ಸರ್ಕಾರದ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ರಾಂಚಿ ನಗರದಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಜಾರ್ಖಂಡ್ ಉಸ್ತುವಾರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್ ಅವರು ಇಂದು ಸೋರೆನ್ ಮಾತ್ರ ಪ್ರಮಾಣ ವಚನ ಸ್ವೀಕಾರ ಪಡೆದು ಬಳಿಕ ವಿಧಾನಸಭೆಯಲ್ಲಿ ವಿಶ್ವಾಸ ಮತದ ನಂತರ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನುತ್ತಾರೆ.
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಅವರು ಭಾಗವಹಿಸುವ ಸಾಧ್ಯತೆಯಿದೆ ಎಂದು ಜೆಎಂಎಂ ನಾಯಕರೊಬ್ಬರು ತಿಳಿಸಿದ್ದಾರೆ.
ಸಿಪಿಐ(ಎಂಎಲ್)ಎಲ್ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ, ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್, ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಮತ್ತು ಬಿಹಾರದ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಕೂಡ ಪ್ರಮಾಣ ವಚನದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಚುನಾವಣೆಯಲ್ಲಿ ಸ್ಪರ್ಧಿಸಿದ 43 ಸ್ಥಾನಗಳಲ್ಲಿ 34 ಸ್ಥಾನಗಳನ್ನು ಗೆಲ್ಲುವ ಮೂಲಕ JMM ತನ್ನ ಅತ್ಯಧಿಕ ಸಾಧನೆಯನ್ನು ಸಾಧಿಸಿತು. ಇಂಡಿಯಾ ಬ್ಲಾಕ್ ನಲ್ಲಿ ಕಾಂಗ್ರೆಸ್ 16, ಆರ್‌ಜೆಡಿ 4 ಮತ್ತು ಸಿಪಿಐ(ಎಂಎಲ್)ಎಲ್ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ.