ಮುಂಬೈ: ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಮಾರಕ ದಾಳಿಯ ನೆರವಿನಿಂದ ಮುಂಬೈ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ಮೇಲೆ ಭಾರತ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ನ್ಯೂಜಿಲೆಂಡ್ ತಂಡವು ಎರಡನೇ ಇನ್ನಿಂಗ್ಸ್ನಲ್ಲಿ 171 ರನ್ಗಳಿಗೆ 9 ವಿಕೆಟ್ ಕಳೆದುಕೊಂಡು ಕೇವಲ 143 ರನ್ಗಳ ಮುನ್ನಡೆ ಸಾಧಿಸಿದೆ. ಜಡೇಜಾ 4 ವಿಕೆಟ್ ಪಡೆದರೆ, ಅಶ್ವಿನ್ 3 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
ಟೀಂ ಇಂಡಿಯಾ ಪರ ಶುಭ್ಮನ್ ಗಿಲ್ 90 ರನ್ ಬಾರಿಸಿದರೆ, ರಿಷಭ್ ಪಂತ್ ಸ್ಪೋಟಕ 60 ರನ್ ಸಿಡಿಸಿದರು. ಇನ್ನು ಕೊನೆಯಲ್ಲಿ ವಾಷಿಂಗ್ಟನ್ ಸುಂದರ್ ಅಜೇಯ 38 ರನ್ ಬಾರಿಸುವ ಮೂಲಕ ಭಾರತ ಇನ್ನಿಂಗ್ಸ್ ಮುನ್ನಡೆ ಸಾಧಿಸಲು ನೆರವಾದರು.
4ನೇ ವಿಕೆಟ್ಗೆ ಡೇರಲ್ ಮಿಚೆಲ್ ಹಾಗೂ ವಿಲ್ ಯಂಗ್ 50 ರನ್ಗಳ ಜತೆಯಾಟವಾಡುವ ಮೂಲಕ ಟೀಂ ಇಂಡಿಯಾಗೆ ಎಚ್ಚರಿಕೆ ರವಾನಿಸಿತು.
ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ದಿಟ್ಟ ಬ್ಯಾಟಿಂಗ್ ನಡೆಸಿದ ವಿಲ್ ಯಂಗ್ 100 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 51 ರನ್ ಬಾರಿಸಿ ಅಶ್ವಿನ್ಗೆ ಕ್ಯಾಚಿತ್ತರು. ಕೊನೆಯಲ್ಲಿ ಗ್ಲೆನ್ ಫಿಲಿಫ್ಸ್ ಕೇವಲ 14 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಚುರುಕಿನ 26 ರನ್ ಗಳಿಸಿ ಅಶ್ವಿನ್ ಬೌಲಿಂಗ್ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.
ಇನ್ನು ಎರಡನೇ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ತಂಡಕ್ಕೆ ಮೊದಲ ಓವರ್ನಲ್ಲೇ ಆಕಾಶ್ ದೀಪ್ ಶಾಕ್ ನೀಡಿದರು. ನಾಯಕ ಟಾಮ್ ಲೇಥಮ್ ಕೇವಲ ಒಂದು ರನ್ ಗಳಿಸಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇದಾದ ಬಳಿಕ ಕಿವೀಸ್ ತಂಡವು ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು.
ಮೂರನೇ ಟೆಸ್ಟ್ ಪಂದ್ಯದಲ್ಲಿ 4 ವಿಕೆಟ್ ಕಳೆದುಕೊಂಡು 86 ರನ್ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ 263 ರನ್ ಗಳಿಸಿ ಸರ್ವಪತನ ಕಂಡಿತು. ಈ ಮೂಲಕ 28 ರನ್ಗಳ ಅಮೂಲ್ಯ ಮುನ್ನಡೆ ಪಡೆಯಿತು.
ಸದ್ಯ ಏಜಾಜ್ ಪಟೇಲ್ 7 ರನ್ ಗಳಿಸಿ ಮೂರನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ನಾಳೆ ಆದಷ್ಟು ಬೇಗ ಏಜಾಜ್ ಪಟೇಲ್ ವಿಕೆಟ್ ಕಬಳಿಸಿ, ಸಾಧಾರಣ ಗುರಿಯನ್ನು ರೋಹಿತ್ ಶರ್ಮಾ ಪಡೆ ಯಶಸ್ವಿಯಾಗಿ ಬೆನ್ನತ್ತಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ.