ಬೆಂಗಳೂರು: ಕಲಬುರಗಿ ವಿಮಾನ ನಿಲ್ದಾಣದ 10 ಕಿ.ಮೀ ವ್ಯಾಪ್ತಿಯಲ್ಲಿ ಕಸಾಯಿಖಾನೆ ಸ್ಥಾಪನೆಗೆ ಅನುಮತಿ ನೀಡಿರುವ ಸಂಬಂಧ ಕೇಂದ್ರ ವಿಮಾನಯಾನ ಸಚಿವಾಲಯ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಲಬುರಗಿ ವಿಮಾನ ನಿಲ್ದಾಣದ 10 ಕಿ.ಮೀ ವ್ಯಾಪ್ತಿಯಲ್ಲಿನ ಮಾಲಗತ್ತಿ ಗ್ರಾಮದಲ್ಲಿ ಕಸಾಯಿಖಾನೆ ಸ್ಥಾಪಿಸಲು ಅನುಮತಿ ನೀಡಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಕೇಂದ್ರ ವಿಮಾನಯಾನ ಸಚಿವಾಲಯ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಕಲಬುರಗಿಯ ಸಾಮಾಜಿಕ ಕಾರ್ಯಕರ್ತ ಹುಂಚೀರಯ್ಯ ಮೊಟಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಲಬುರಗಿ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ, ಭೂಪಾಲ ತೇಗನೂರು ಗ್ರಾ.ಪಂ ಪಿಡಿಒ, ಖಾಸಗಿ ಸಂಸ್ಥೆಗಳಾದ ಎಂಎಎಂ ಆಗ್ರೋಡ್, ಮುಂಬೈ ಮೂಲದ ಮೆಸರ್ಸ್ ಎಕ್ಸ್‌ಪೋರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ನೋಟಿಸ್ ಜಾರಿಗೊಳಿಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ಏರ್‌ಕ್ರಾಫ್ಟ್ ಕಾಯ್ದೆ-1943ರ ಪ್ರಕಾರ ವಿಮಾನ ನಿಲ್ದಾಣದ 10 ಕಿ.ಮೀ ವ್ಯಾಪ್ತಿಯಲ್ಲಿ ಕಸಾಯಿಖಾನೆ, ಪ್ರಾಣಿ ವಧಾ ಗೃಹಗಳನ್ನು ನಿರ್ಮಿಸುವಂತಿಲ್ಲ. ಆದರೆ, ಇದನ್ನು ಕಡೆಗಣಿಸಿ ಮಾಲಿನ್ಯ ನಿಯಂತ್ರಣ ಮಂಡಳಿ ಮಾಲಗತ್ತಿ ಗ್ರಾಮದಲ್ಲಿ ಕಸಾಯಿಖಾನೆ ಸ್ಥಾಪಿಸಲು ಮುಂಬೈ ಮೂಲದ ಮೆಸರ್ಸ್ ಎಕ್ಸ್‌ಪೋರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅನುಮತಿ ನೀಡಿದೆ. ಈ ಹಿಂದೆ ಇದೇ ಕಂಪೆನಿ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿತ್ತು. ಆದರೆ, ಇದೀಗ ಏಕಾಏಕಿ 2024ರ ಫೆಬ್ರವರಿ 28ರಂದು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದೆ. ಇದನ್ನು ರದ್ದುಪಡಿಸಬೇಕು” ಎಂದು ಮನವಿ ಮಾಡಿದರು.
ಕೇಂದ್ರ ವಿಮಾನಯಾನ ಸಚಿವಾಲಯವನ್ನು ಪ್ರತಿವಾದಿಯನ್ನಾಗಿ ಸೇರಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ, ಕೇಂದ್ರ ವಿಮಾನಯಾನ ಸಚಿವಾಲಯಕ್ಕೂ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್ 16ಕ್ಕೆ ಮುಂದೂಡಿದೆ.
WhatsApp Group
Join Now
Telegram Group
Join Now
Instagram Account
Follow Now
Facebook Page
Follow Now